ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವ ತಾಕತ್ತು ಕಾಂಗ್ರೆಸ್‌ನ ಯಾವ ಶಾಸಕರಿಗೂ ಇಲ್ಲ.

 ಶಿವಮೊಗ್ಗ, ಆ. 4: ರಾಜ್ಯ ಸರ್ಕಾರ ನಡೆಸಿರುವ ಸಚಿವ ಸಂಪುಟ ವಿಸ್ತರಣೆ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರಾಗಿ ನೇಮಕ ಮಾಡಿರುವ ಕ್ರಮವನ್ನು ಶಿವಮೊಗ್ಗ ನಗರ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರವಾಗಿ ಖಂಡಿಸಿದ್ದಾರೆ.



ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಆ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ನೌಕರ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂತಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಚಂದ್ರಶೇಖರ್ ಅವರ ಕುಟುಂಬ ಇನ್ನೂ ಸಂಕಷ್ಟದಲ್ಲಿರುವಾಗ, ಅವರ ನೋವನ್ನು ಮರೆತು ಆರೋಪಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅಕ್ಷಮ್ಯ. ಜನರ ಭಾವನೆಗಳಿಗೆ ಬೆಲೆ ಕೊಡದೆ ಕಾಂಗ್ರೆಸ್ ಸರ್ಕಾರ ಅಧಿಕಾರ ಉಳಿಸಿಕೊಳ್ಳುವ ರಾಜಕೀಯ ಮಾಡುತ್ತಿದೆ ಎಂದು ಚನ್ನಬಸಪ್ಪ ವಾಗ್ದಾಳಿ ನಡೆಸಿದರು.

ಇದೇ ವೇಳೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರ ಕುರಿತೂ ಪ್ರತಿಕ್ರಿಯಿಸಿದ ಅವರು, "ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ ಗೆಲ್ಲುವ ಧೈರ್ಯ ಕಾಂಗ್ರೆಸ್‌ನ ಯಾವುದೇ ಶಾಸಕರಿಗೂ ಇಲ್ಲ. ಅವರ ಹೇಳಿಕೆಗಳು ಕೇವಲ ರಾಜಕೀಯ ನಾಟಕವಷ್ಟೇ" ಎಂದು ಲೇವಡಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಬಿ. ನಾಗೇಂದ್ರ ಅವರ ಪುನರಾಯ್ಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಈ ವಿಚಾರವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ


ವರದಿ ನದೀಮ್ ಕೆ ಮ್

Comments